ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷೆ ಯಶೋಧಾ ಬಿ ಅವರು ಇಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಉದ್ಯಮಿ ಕಲ್ಲಡ್ಕ ಕೃಷ್ಣಪ್ಪ ಅವರ ಧರ್ಮಪತ್ನಿಯಾಗಿರುವ ಯಶೋಧ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕುಲಾಲ ಸಮುದಾಯದ ಮುಂಚೂಣಿ ನಾಯಕಿಯಾಗಿದ್ದು, ಕುಲಾಲ ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿಕೊಂಡು ಸಮರ್ಥವಾಗಿ ನಿರ್ವಹಿಸಿದವರು. ಪುತ್ತೂರು ಕುಂಬಾರರ ಗುಡಿ ಕೈಗಾರಿಕೆ ಸಂಘ .ನಿ. ಇದರ ಮಾಜಿ ನಿರ್ದೇಶಕರಾಗಿಯೂ ಕೆಲಸ ಮಾಡಿದವರು. ಎರಡು ಬಾರಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಪುರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಪುರಸಭಾ ಸದಸ್ಯರಾಗಿ ಆಯ್ಕೆಯಾದ ಪ್ರಥಮ ಅವಧಿಯಲ್ಲಿ ಇವರು ಪುರಸಭಾ ಉಪಾಧ್ಯಕ್ಷೆಯಾಗಿಯೂ ಎರಡನೇ ಬಾರಿ ಸದಸ್ಯರಾಗಿ ಆಯ್ಕೆಯಾದ ವೇಳೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ಜೊತೆಗೆ ಜಿಲ್ಲಾ ಮಹಿಳಾ ಮೋರ್ಚಾದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿಯಲ್ಲಿ ಸಕ್ರೀಯರಾಗಿದ್ದುಕೊಂಡು ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಅವರು ಪತಿ, ಒಬ್ಬ ಮಗ ಮತ್ತು ಮಗಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.