ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : ಈ ಬಾರಿಯ ಪ್ರತಿಷ್ಠಿತ “ಕನ್ನಡ ಸಿರಿ” ಪ್ರಶಸ್ತಿಗೆ ರಂಗ ಕಲಾವಿದ, ನಾಟಕಕಾರ, ಸಾಹಿತಿ ಮತ್ತು ಸಾಂಸ್ಕೃತಿಕ ಸಂಘಟಕ ಎಚ್.ಕೆ. ನಯನಾಡು ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಿಸಿ ರೋಡ್ನ ಸ್ಪರ್ಶ ಕಲಾಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ವಿವಿಧ ಪ್ರಶಸ್ತಿಗಳನ್ನು ಈ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುತ್ತದೆ. ಎಚ್ಕೆ ನಯನಾಡು (ಹರೀಶ್ ಕುಲಾಲ್) ಅವರು ವಿವಿಧ ಕನ್ನಡ ಸಾಹಿತ್ಯಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಯ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದವರಾಗಿದ್ದಾರೆ. ಸಮ್ಮೇಳನಾಧ್ಯಕ್ಷ ಚಿದಂಬರ ಬೈಕಂಪಾಡಿ, ಸ್ವಾಗತ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಸಮಿತಿ ಕಾರ್ಯಾಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಜಿಲ್ಲಾ ರೋಟರಿ ಮಾಜಿ ಗವರ್ನರ್ ಎನ್.ಪ್ರಕಾಶ್ ಕಾರಂತ್, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ವಕೀಲ ಜಯರಾಮ ರೈ ಮೊದಲಾದ ಗಣ್ಯರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

